ಮಾಣಿ ಸಮೀಪದ ಬರಿಮಾರು ಕಲ್ಲೆಟ್ಟಿ ದೈವಸ್ಥಾನದ ಬಳಿ ಈ ಘಟನೆ ನಡೆದಿದೆ.
ಮೃತ ಬಾಲಕಿಯನ್ನು ಪೆರ್ನೆ ನಿವಾಸಿ ಚಂದ್ರಶೇಖರ್ ಅವರ ಪುತ್ರಿ, ಯುಕೆಜಿ ವಿದ್ಯಾರ್ಥಿನಿ ಚಿರಣ್ವಿ (5) ಎಂದು ಗುರುತಿಸಲಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಪೆರಾಜೆ ಸಾದಿಕುಕ್ಕು ನಿವಾಸಿ ಗಣೇಶ್ ಗೌಡ ಅವರ ಪುತ್ರಿ ಅನ್ವಿ ಅವರನ್ನು ತಕ್ಷಣ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೋರ್ವ ಗಾಯಾಳು ಪೆರ್ನೆ ನಿವಾಸಿ ಕ್ಷಿತಿ ರೈ ಅವರನ್ನು ಕಲ್ಲಡ್ಕದ ಪುಷ್ಪರಾಜ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.
ಮಕ್ಕಳನ್ನು ಕರೆದುಕೊಂಡು ಕಲ್ಲಡ್ಕದಿಂದ ಮಾಣಿ, ಅಲ್ಲಿಂದ ಬರಣಿಕೆರೆ, ಬರಿಮಾರು, ಕಲ್ಲೆಟ್ಟಿ ಮಾರ್ಗವಾಗಿ ಬುಡೋಳಿ ಮೂಲಕ ಪೆರ್ನೆಗೆ ತೆರಳುತ್ತಿದ್ದ ಶಾಲಾ ಬಸ್ ಮೇಲೆ, ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಏಕಾಏಕಿ ಬುಡ ಸಮೇತ ಉರುಳಿ ಬಿದ್ದಿದೆ. ಮಳೆಯೊಂದಿಗೆ ಬೀಸಿದ ಬಿರುಗಾಳಿಯ ತೀವ್ರತೆಗೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಮರ ಬಿದ್ದ ರಭಸಕ್ಕೆ ಬಸ್‌ನ ಮೇಲ್ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕ್ಷಣಾರ್ಧದಲ್ಲೇ ಬಸ್‌ನೊಳಗೆ ಆತಂಕದ ವಾತಾವರಣ ನಿರ್ಮಾಣವಾಯಿತು. ಸ್ಥಳೀಯರು ಕೂಡಲೇ ಧಾವಿಸಿ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರತೆಗೆದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.
ಇದೇ ವೇಳೆ ಕಲ್ಲೆಟ್ಟಿ ದೇವಸ್ಥಾನದ ಮೇಲೂ ಬೃಹತ್ ಮರ ಉರುಳಿ ಬಿದ್ದಿದ್ದು, ದೇವಸ್ಥಾನಕ್ಕೂ ಹಾನಿಯಾಗಿದೆ. ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಹಾಗೂ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು.
ಶಾಸಕ ರಾಜೇಶ್ ನಾಯ್ಕ್ ಅವರ ತುರ್ತು ಸ್ಪಂದನೆ
ಘಟನೆ ನಡೆದ ವೇಳೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಬೆಂಗಳೂರಿನಲ್ಲಿ ಕರ್ನಾಟಕ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಸಭೆಯಲ್ಲಿ ಭಾಗವಹಿಸುತ್ತಿದ್ದರು. ಘಟನೆ ಕುರಿತು ಮಾಹಿತಿ ದೊರೆಯುತ್ತಿದ್ದಂತೆಯೇ ಅಧಿಕಾರಿಗಳು ಹಾಗೂ ವೈದ್ಯರನ್ನು ಸಂಪರ್ಕಿಸಿ ಗಾಯಾಳು ಮಕ್ಕಳಿಗೆ ತುರ್ತು ಚಿಕಿತ್ಸೆ ದೊರೆಯುವಂತೆ ಸೂಚಿಸಿದರು.
ಗಂಭೀರವಾಗಿ ಗಾಯಗೊಂಡಿರುವ ಅನ್ವಿಗೆ ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಆಸ್ಪತ್ರೆಯ ವೈದ್ಯರೊಂದಿಗೆ ನೇರವಾಗಿ ಸಮಾಲೋಚನೆ ನಡೆಸಿದ ಶಾಸಕರು, ಚಿಕಿತ್ಸೆಯಲ್ಲಿ ಯಾವುದೇ ವಿಳಂಬವಾಗದಂತೆ ಕ್ರಮ ಕೈಗೊಂಡರು.
ಬಳಿಕ ಸಭೆಯನ್ನು ಮುಗಿಸಿ ವಿಮಾನದ ಮೂಲಕ ತುರ್ತುವಾಗಿ ಮಂಗಳೂರಿಗೆ ಆಗಮಿಸುತ್ತಿರುವ ಅವರು, ಮೊದಲು ಎ.ಜೆ. ಆಸ್ಪತ್ರೆಗೆ ಭೇಟಿ ನೀಡಿ ಅನ್ವಿಯ ಆರೋಗ್ಯ ವಿಚಾರಿಸಲಿದ್ದು, ನಂತರ ಪುತ್ತೂರು ಆಸ್ಪತ್ರೆಗೆ ತೆರಳಿ ಚಿರಣ್ವಿ ಹಾಗೂ ಗಾಯಾಳು ವಿದ್ಯಾರ್ಥಿನಿ ಹಾಗೂ ಕುಟುಂಬದವರನ್ನು ಭೇಟಿ ಮಾಡುವುದಾಗಿ ಶಾಸಕ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಈ ದುರಂತದಿಂದ ಪೆರ್ನೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಮೃತ ಬಾಲಕಿಯ ಕುಟುಂಬಕ್ಕೆ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಸಂತಾಪ ಸೂಚಿಸಿವೆ. ಭಾರೀ ಮಳೆ ಮತ್ತು ಬಿರುಗಾಳಿಯ ಸಂದರ್ಭಗಳಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ತೆರವು ಕಾರ್ಯಕ್ಕೆ ಆದ್ಯತೆ ನೀಡಬೇಕು ಎಂಬ ಒತ್ತಾಯವೂ ಸಾರ್ವಜನಿಕರಿಂದ ಕೇಳಿಬಂದಿದೆ.
