ಡೆಹ್ರಾಡೂನ್: ಬಸ್‌ವೊಂದು ಕಮರಿಗೆ ಬಿದ್ದ ಪರಿಣಾಮ ಕನಿಷ್ಠ 20 ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಅಲ್ಮೋರಾದ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ನಡೆದಿದೆ.
ಇಂದು (ನ.4) ಬೆಳಗ್ಗೆ 9 ಗಂಟೆ ಸುಮಾರಿಗೆ 35 ಮಂದಿ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ 20 ಮಂದಿ ಸಾವನ್ನಪ್ಪಿದ್ದು, ಸಾವು-ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.
ಸದ್ಯ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡಗಳು, ಸ್ಥಳೀಯ ಪೊಲೀಸರು ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಅಪಘಾತ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಕೆಲ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಲ್ಮೋರಾ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ, ಉಪ್ಪಿನಂಗಡಿ ಉಪಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.
ರಕ್ಷಣಾಕಾರ್ಯ ನಡೆಯುತ್ತಿರುವ ಹೊತ್ತಿನಲ್ಲೇ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತ್ರಸ್ತರಿಗೆ ತಲಾ 4 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ. ಅಲ್ಲದೇ ಘಟನೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸುವಂತೆ ಅವರು ಕುಮಾನ್ ವಿಭಾಗದ ಆಯುಕ್ತರಿಗೆ ಸೂಚಿಸಿದ್ದಾರೆ.