ಇನ್ನುಮುಂದೆ ಪ್ರತಿ ವರ್ಷದ ನವೆಂಬರ್ 3, 4, 5 ರಂದು ಹಂಪಿ ಉತ್ಸವದ ಆಯೋಜನೆ ಮಾಡಲಾಗುವುದು. ರಾಜ್ಯ ಸರ್ಕಾರ ಹಂಪಿ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದರು.
ಅವರು ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಆಯೋಜಿಸಿದ್ದ ಐತಿಹಾಸಿಕ ಹಂಪಿ ಉತ್ಸವ – 2026 ಅನ್ನು ಉದ್ಘಾಟಿಸಿ, ಮಾತನಾಡಿದರು.
ಮಾಜಿ ಸಚಿವರಾದ ದಿವಂಗತ ಎಂ ಪಿ ಪ್ರಕಾಶ್ ಅವರು ಹಿಂದೆ ಕನ್ನಡ ಮತ್ತು ಸಂಸ್ಕೃತಿಯ ಸಚಿವರಾಗಿದ್ದ ಸಂದರ್ಭದಲ್ಲಿ, ಮೈಸೂರು ದಸರಾ ಉತ್ಸವದ ವಿಜೃಂಭಣೆಯನ್ನು ಕಂಡು, ಇದೇ ರೀತಿಯ ಉತ್ಸವವನ್ನು ಹಂಪಿಯಲ್ಲಿಯೂ ನೆರವೇರಿಸಬೇಕೆಂದು ಆಶಿಸಿದ್ದರು. ಎಂ ಪಿ ಪ್ರಕಾಶ್ ಅವರು ಕನ್ನಡ ನಾಡು, ನುಡಿ, ಸಾಹಿತ್ಯಗಳಲ್ಲಿ ಅಪಾರ ಆಸಕ್ತಿ ವಹಿಸಿದ್ದರು. ಈ ರೀತಿಯ ಅದ್ಧೂರಿ ಹಂಪಿ ಉತ್ಸವದ ಆಚರಣೆಗೆ ಮೂಲಕಾರಣ ಎಂ ಪಿ ಪ್ರಕಾಶ್ ಅವರು. ಅವರೊಬ್ಬ ಅಪರೂಪದ ವ್ಯಕ್ತಿ ಎಂದರು. ಇದನ್ನೂ ಓದಿ : Superfoods for brain: ಈ ಆಹಾರಗಳು ನಿಮ್ಮ ಮೆದುಳನ್ನು ಆರೋಗ್ಯಕರವಾಗಿ, ಸ್ಮರಣಶಕ್ತಿಯನ್ನು ಚುರುಕಾಗಿಡುತ್ತವೆ
ಸರ್ಕಾರ ಆಚರಿಸುವ ಚಾಲುಕ್ಯ ಉತ್ಸವ, ಹಂಪಿ ಉತ್ಸವ, ಕಿತ್ತೂರು ಉತ್ಸವ, ಆನೆಗುಂದಿ ಉತ್ಸವ, ಬನವಾಸಿ ಉತ್ಸವ, ಮೈಸೂರು ದಸರಾ, ಕರಾವಳಿ ಉತ್ಸವಗಳ ಮೂಲಕ ನಾಡಿನ ಸಾಹಿತ್ಯ, ಕಲೆ, ಸಂಗೀತ ಪರಂಪರೆಗಳನ್ನು ಸಂರಕ್ಷಿಸುವ ದಿಸೆಯಲ್ಲಿ ಮುಖ್ಯವಾಗಿದೆ. ಮುಂದಿನ ಪೀಳಿಗೆಗೆ ಕನ್ನಡದ ಶ್ರೀಮಂತ ಪರಂಪರೆ ಕೊಂಡೊಯ್ಯವ ದಿಸೆಯಲ್ಲಿ ಸರ್ಕಾರ ಎಲ್ಲ ರೀತಿಯ ನೆರವು ನೀಡಲು ಬದ್ಧವಾಗಿದೆ.
ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯ ವರ್ಣರಂಜಿತ ವೇದಿಕೆಯಲ್ಲಿ ಆಯೋಜಿಸಿದ್ದ “ಐತಿಹಾಸಿಕ ಹಂಪಿ ಉತ್ಸವ – 2026” ಅನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದೆ. ಕಲೆ, ಸಾಹಿತ್ಯ, ಸಂಗೀತದ ಸಂಗಮವಾಗಿದ್ದ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಸ್ಮರಿಸುವ ಹಾಗೂ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಮುಂದುವರಿಸುವ ಕಾರ್ಯವನ್ನು ಹಂಪಿ ಉತ್ಸವದ ಮೂಲಕ ನಮ್ಮ ಸರ್ಕಾರವು ಜತನದಿಂದ ಮಾಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್, ಸಚಿವರುಗಳಾದ ಶಿವರಾಜ್ ಎಸ್. ತಂಗಡಗಿ, ಬೈರತಿ ಸುರೇಶ್, ಖ್ಯಾತ ನಟ ಶಿವರಾಜ್ ಕುಮಾರ್, ಸಂಸದರಾದ ತುಕಾರಾಮ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಮಾಜಿ ಸಚಿವ ಹೆಚ್.ಎಂ.ರೇವಣ್ಣ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಶಾಸಕರು, ಮುಖಂಡರು ಸೇರಿದಂತೆ ಅನೇಕ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.