ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಸಿ.ಎಂ.ಸಿದ್ಧರಾಮಯ್ಯ ಅವರು ಅಭಿನಂದಿಸಿದರು.
ಅವರು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆಗಳ ಮೇಲೆ ಭಾರತೀಯ ಸೈನ್ಯವು ನಡೆಸಿದ ಯಶಸ್ವಿ ದಾಳಿಯ ಕುರಿತು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ, ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ಧ ಅವರನ್ನು ಛೂಬಿಡುತ್ತಿದ್ದ ಪಾಕಿಸ್ಥಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ ಎಂದರು.
ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ.
ಆಪರೇಷನ್ ಸಿಂಧೂರ ಹೆಸರಿನಲ್ಲಿ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದು, ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ.
ನಾವು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಉಗ್ರರ ಮೇಲಿನ ದಾಳಿ ಹಿನ್ನೆಲೆಯಲ್ಲಿ ಸಂವಿಧಾನ ಉಳಿಸಿ ಅಡಿಯಲ್ಲಿ ರಾಯಚೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಕಾರ್ಯಕ್ರಮನ್ನು ರದ್ದುಗೊಳಿಸಲಾಗಿದೆ.
ಇದು ನಾವೆಲ್ಲರೂ ಒಗ್ಗಟ್ಟಿನಿಂದ ಮತ್ತು ಅಷ್ಟೇ ಎಚ್ಚರದಿಂದ ಇರುವ ಕಾಲ. ರಾಜ್ಯದ ಭದ್ರತಾ ವ್ಯವಸ್ಥೆ ಮೇಲೆ ನಿಗಾ ಇಡುವಂತೆ ಪೊಲೀಸ್ ವರಿಷ್ಠರಿಗೆ ತಿಳಿಸಿದ್ದೇನೆ. ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಸಂಪರ್ಕದಲ್ಲಿರುತ್ತದೆ. ಅಲ್ಲಿಂದ ಬರುವ ಸೂಚನೆಗಳನ್ನು ಪಾಲಿಸಲಾಗುತ್ತದೆ. ಯಾರೂ ಭಯಭೀತರಾಗುವ ಅವಶ್ಯಕತೆ ಇಲ್ಲ. ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಗುವುದು ಎಂದರು.