ಮುಂದಿನ ಆಯವ್ಯಯದಲ್ಲಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುತ್ತೇನೆ. ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸುವ ಉದ್ದೇಶದಿಂದ 2016 ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಈ ವೈದ್ಯಕೀಯ ಕಾಲೇಜನ್ನು ಪ್ರಾರಂಭಿಸಲಾಗಿದ್ದು, ಇಂದು 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸುಮಾರು 200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದು .ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದರು.
ಅವರು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ “450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ, ಯಲ್ಲಾಪುರ ತಾಲ್ಲೂಕಿನ ಖಾನಾಪುರ ತಾಳಗುಪ್ಪ ರಾಜ್ಯ ಹೆದ್ದಾರಿ 93 ರಲ್ಲಿನ ನೂತನ ಸೇತುವೆ, ಯಲ್ಲಾಪುರ ಪಟ್ಟಣದ ನಿರೀಕ್ಷಣಾ ಮಂದಿರದ ಹೊಸ ಕಟ್ಟಡ ಹಾಗೂ ಮುಂಡಗೋಡ ತಾಲ್ಲೂಕಿನ ಹೊಸ ಪ್ರವಾಸಿ ಮಂದಿರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಈ ಮೊದಲು ಇಲ್ಲಿನ ಜನರು ಉನ್ನತ ಮಟ್ಟದ ಚಿಕಿತ್ಸೆಗಾಗಿ ಉಡುಪಿ, ಮಂಗಳೂರು, ಹುಬ್ಬಳ್ಳಿಗೆ ಹೋಗುತ್ತಿದ್ದರು. ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮುಂದಿನ ಆಯವ್ಯಯದಲ್ಲಿ ಮಂಜೂರು ಮಾಡಿಕೊಡುತ್ತೇನೆ.
ಪ್ರತಿ ಜಿಲ್ಲೆಯಲ್ಲಿಯೂ ಬಡವರಿಗಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಕ್ಯಾನ್ಸರ್ ಯೂನಿಟ್ ಒಂದನ್ನು ಕಾರವಾರದಲ್ಲಿ ಸ್ಥಾಪಿಸಲಾಗುವುದು. ಜಿಲ್ಲಾ ಕೇಂದ್ರಗಳಲ್ಲಿ ಎಲ್ಲಾ ವೈದ್ಯಕೀಯ ವ್ಯವಸ್ಥೆಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಕರ್ನಾಟಕದಲ್ಲಿ ಈಗಾಗಲೇ 22 ಸರ್ಕಾರಿ ಮೆಡಿಕಲ್ ಕಾಲೇಜಿದ್ದು, ಮುಂದಿನ ದಿನಗಳಲ್ಲಿ ಕೋಲಾರ, ಪುತ್ತೂರು, ಬಿಜಾಪುರಗಳಲ್ಲಿ ಕಾಲೇಜು ನಿರ್ಮಿಸಲಾಗುವುದು ಎಂದರು.
ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಚಿವರಾದ ಶರಣಪ್ರಕಾಶ್ ಪಾಟೀಲ್, ಮಂಕಾಳ ವೈದ್ಯ, ಮಾಜಿ ಸಚಿವರೂ, ಶಾಸಕರು ಆದ ಆರ್.ವಿ.ದೇಶಪಾಂಡೆ, ಶಾಸಕರುಗಳಾದ ಶಿವರಾಮ್ ಹೆಬ್ಬಾರ್, ಸತೀಶ್ ಸೈಲ್, ಭೀಮಣ್ಣ ನಾಯ್ಕ ಸೇರಿ ಹಲವು ಪ್ರಮುಖರು ಸಮಾರಂಭದಲ್ಲಿ ಉಪಸ್ಥಿತರಿದ್ದರು.