ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಕಾಡಾನೆ ದಾಳಿಗೆ ಬೆಂಗಳೂರು ಮೂಲದ ಪ್ರವಾಸಿಗನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಇದನ್ನೂ ಓದಿ :ಜೈಲಿಂದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್
ಸ್ಥಳೀಯ ಹೋಂ ಸ್ಟೇಗೆ ಪ್ರವಾಸಕ್ಕಾಗಿ ಆಗಮಿಸಿದ್ದ ಸುಮಾರು 40 ವರ್ಷದ ಮುರುಳಿಕೃಷ್ಣ ಎಂಬ ಪ್ರವಾಸಿಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಪ್ರವಾಸಿಗರು ತೆರಾಲು ಗ್ರಾಮದ ಹೋಂಸ್ಟೇ ಯಲ್ಲಿ ವಾಸ್ತವ್ಯ ಹೂಡಿದ್ದರು. ಶನಿವಾರ ಸಂಜೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ನಾಯಿಯನ್ನು ಅಟ್ಟಿಸಿಕೊಂಡು ಬಂದ ಕಾಡಾನೆ ಏಕಾಏಕಿ ಪ್ರವಾಸಿಗನ ಮೇಲೆ ದಾಳಿ ನಡೆಸಿದೆ ಎನ್ನಲಾಗಿದೆ.
ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಪ್ರವಾಸಿಗನನ್ನ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲೇ ಆತ ಮೃತಪಟ್ಟಿದ್ದಾನೆ. ಘಟನೆಯಿಂದ ತೆರಾಲು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪ್ರವಾಸಿಗರು ಹಾಗೂ ಸ್ಥಳೀಯರಲ್ಲಿ ಕಾಡಾನೆ ಸಂಚಾರದ ಬಗ್ಗೆ ಭಯದ ವಾತಾವರಣ ಮನೆಮಾಡಿದೆ.
ಇನ್ನೂ ಘಟನಾ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆ ಯಾವ ಮಾರ್ಗದಿಂದ ಗ್ರಾಮಕ್ಕೆ ಬಂದಿ? ದಾಳಿ ಹೇಗೆ ಸಂಭವಿಸಿತು? ಎಂಬ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.