ನವದೆಹಲಿ: ಜೂನ್ 9 ರ ಭಾನುವಾರ ಸಂಜೆ 6 ಗಂಟೆಗೆ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಇಂದು ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಎನ್‌ಡಿಎ (NDA) ಸಂಸದರ ಸಭೆ ನಡೆಯಿತು. ಈ ವೇಳೆ ಪ್ರಹ್ಲಾದ್‌ ಜೋಶಿ ಜೂನ್‌ 9 ರಂದು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.

ಆರಂಭದಲ್ಲಿ ಶನಿವಾರ ಪ್ರಮಾಣ ವಚನ ನಡೆಯಲಿದೆ ಎಂದು ವರದಿಯಾಗಿತ್ತು. ಆದರೆ ಈಗ ಭಾನುವಾರ ಪ್ರಮಾಣ ವಚನ ನಡೆಯಲಿದೆ ಎನ್ನುವುದು ಅಧಿಕೃತವಾಗಿ ಪ್ರಕಟವಾಗಿದೆ. ಯಾರೆಲ್ಲ ಪ್ರಮಾಣ ವಚನ ನಡೆಸಲಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ.

ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ, ನಾನು ಈಗಾಗಲೇ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದರು. ಇನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಗೋವಾದಲ್ಲಿ ಒಂದೇ ಒಂದು ಸ್ಥಾನ ಗೆಲ್ಲಲು ಸಾಧ್ಯವಾಯಿತು. ಆದರೆ ಇನ್ನೊಂದು ಸ್ಥಾನ ಗೆಲ್ಲಲು ಸಾಧ್ಯವಾಗದಿರುವುದು ಬೇಸರ ತಂದಿದೆ ಎಂದರು.

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 293 ಸ್ಥಾನಗಳನ್ನು ಗೆದ್ದಿದೆ. ಚಂದ್ರಬಾಬು ನಾಯ್ಡು ಅವರ ಟಿಡಿಪಿ ಮತ್ತು ನಿತೀಶ್ ಕುಮಾರ್ ಅವರ ಜೆಡಿಯು ಕ್ರಮವಾಗಿ 16 ಮತ್ತು 12 ಸ್ಥಾನಗಳನ್ನು ತಮ್ಮ ರಾಜ್ಯಗಳಲ್ಲಿ ಗೆದ್ದುಕೊಂಡಿದ್ದಾರೆ.