ನವದೆಹಲಿ: ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. ಸಮಸ್ತ ಭಾರತೀಯರು ದೇಶಭಕ್ತಿ ಭಾವ ಮೆರೆದಿದ್ದಾರೆ. ನವದೆಹಲಿಯ ಕೆಂಪುಕೋಟೆಯಲ್ಲಿ ಸ್ವಾತಂತ್ರ ದಿನವನ್ನು ಆಚರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ 7:30ರ ಸುಮಾರಿಗೆ ಧ್ವಜಾರೋಹಣ ನೆರವೇರಿಸಿ, ದೇಶದ ಜನತೆಗೆ ಸ್ವಾತಂತ್ರೋತ್ಸವದ ಶುಭಕೋರಿದರು.

ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ರಾಜ್‌ಘಾಟ್‌ನಿಂದ ಕೆಂಪು ಕೋಟೆಗೆ ತಲುಪಿದರು. ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಪ್ರಧಾನಿಯನ್ನು ಸ್ವಾಗತಿಸಿದರು.

ನರೇಂದ್ರ ಮೋದಿ ಅವರಿಗೆ ಗನ್ ಸೆಲ್ಯೂಟ್ ಮೂಲಕ ಸ್ವಾಗತ ಕೋರಲಾಯಿತು. ಸಾಂಪ್ರದಾಯಿಕ ಕೆಂಪು ಕೋಟೆಯ ಮೇಲೆ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ, ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದಾರೆ.

ಸ್ವಾತಂತ್ರೋತ್ಸವದ ಹಿನ್ನೆಲೆಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದ ಮೋದಿ, ನನ್ನ ಸಹ ಭಾರತೀಯರಿಗೆ ಸ್ವಾತಂತ್ರ್ಯ ದಿನದ ಶುಭಾಶಯಗಳು. ಜೈ ಹಿಂದ್! ಶುಭಾಶಯ ತಿಳಿಸಿದ್ದರು.

ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಆ ಮೂಲಕ ಸತತ 11ನೇ ಬಾರಿಗೆ ಧ್ವಜಾರೋಹಣ ಮಾಡಿ ದೇಶದ ಜನತೆಯನ್ನುದ್ದೇಶಿಸಿ ಇಂದು ಭಾಷಣ ಮಾಡಿದ್ದಾರೆ.