ಕುಂಬಾರ ಸಮುದಾಯದವರು ಅತ್ಯಂತ ಹಿಂದುಳಿದ ಮತ್ತು ಕಡಿಮೆ ಜನಸಂಖ್ಯೆಯಿರುವ ಸಮುದಾಯವಾಗಿದೆ. ಕಾಯಕ ಯೋಗಿಗಳಾಗಿರುವ ಕುಂಬಾರ ಸಮಾಜದವರು ಮಣ್ಣಿನ ಕಲಾಕೃತಿಗಳನ್ನು ನಿರ್ಮಿಸುವ ಕಲೆಯ ಪರಿಣಿತಿ ಹೊಂದಿದ್ದಾರೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದರು.
ಅವರು ಮೈಸೂರು ಜಿಲ್ಲಾ ಕುಂಬಾರ ಸಂಘ ಆಯೋಜಿಸಿದ್ದ ರಾಜ್ಯ ಕುಂಬಾರರ ಮಹಾ ಸಮ್ಮೇಳನವನ್ನು ಉದ್ಘಾಟಿಸಿ, ಸಮುದಾಯದ ಸಾಮಾಜಿಕ ಸೇವೆಯನ್ನು ಸ್ಮರಿಸಿ ಮಾತನಾಡಿದರು.

ಜ್ಞಾನದ ಬೆಳಕು ನೀಡಿದ ಕವಿ ಸರ್ವಜ್ಞರು, ಈ ಸಮುದಾಯಕ್ಕೆ ಸೇರಿರುವುದು ಹೆಮ್ಮೆಯ ವಿಷಯ. 12ನೇ ಶತಮಾನದಲ್ಲಿ ಬಸವಣ್ಣನವರು ಕಾಯಕ ಮತ್ತು ದಾಸೋಹಗಳನ್ನು ಸಮಾಜಕ್ಕೆ ನೀಡಿದರು. ಚತುರ್ವರ್ಣ ವ್ಯವಸ್ಥೆ ಹಿಂದಿನಿಂದಲೂ ಬಂದಿರುವ ವ್ಯವಸ್ಥೆ. ಆರ್ಥಿಕವಾಗಿ ಹಿಂದುಳಿದ ಶೂದ್ರ ವರ್ಗದವರು ಜನಸಂಖ್ಯೆಯ ಸುಮಾರು ಶೇ.80 ರಷ್ಟಿದ್ದು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ ಎಂದರು.

ಕುಂಬಾರ ಸಮುದಾಯದ ಬೇಡಿಕೆಗಳನ್ನು ಪರಿಶೀಲಿಸಿ, ಕ್ರಮ ಕೈಗೊಳ್ಳಲಾಗುವುದು. ಸಮುದಾಯದವರಿಗೆ ಬಿಡಿಎ ನಿವೇಶನ ಪಡೆಯಲು ಸೂಕ್ತ ಅನುದಾನ ನೀಡುವ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು. ಕುಂಬಾರ ಅಭಿವೃದ್ಧಿ ನಿಗಮಕ್ಕೆ ಸೂಕ್ತ ಅನುದಾನ ನೀಡಲಾಗುವುದು. ಕುಂಬಾರ ಸಮಾಜದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ಈ ಸಂದರ್ಭದಲ್ಲಿ ಕ್ಷೇತ್ರ ಮಾಣೀಲದ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಬಿಜಾಪುರ ತೆಲಸಂಗದ ಶ್ರೀ ಶ್ರೀ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ ಹಾಗೂ ಚಿತ್ರದುರ್ಗ ಕುಂಬಾರ ಗುಂಡಯ್ಯ ಮಹಾ ಸಂಸ್ಥಾನದ ಬಸವಮೂರ್ತಿ ಕುಂಬಾರ ಗುಂಡಯ್ಯ ಸ್ವಾಮೀಜಿಗಳ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಕೆ.ವೆಂಕಟೇಶ್, ಉತ್ತರ ಪ್ರದೇಶ ಸರ್ಕಾರದ ಸಚಿವರಾದ ಧರ್ಮವೀರ್ ಪ್ರಜಾಪತಿ, ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ ಸೇರಿ ಜಿಲ್ಲೆಯ ಶಾಸಕರುಗಳು ಮತ್ತು ನಾಯಕರುಗಳು ಹಾಗೂ ಕುಂಬಾರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಕುಂಬಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಾ|| ಶ್ರೀನಿವಾಸನ್ ವೇಲು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.