ವೃಕ್ಷಮಾತೆ ಎಂದೇ ಜನಪ್ರಿಯತೆ ಪಡೆದಿದ್ದ ಸಾಲು ಮರದ ತಿಮ್ಮಕ್ಕ ಇಂದು (ನವೆಂಬರ್ 14) ನಿಧನರಾಗಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು. 1911ರಲ್ಲಿ ಜನಿಸಿದ ಅವರು ಅದೆಷ್ಟೋ ಸಸಿಗಳನ್ನು ನೆಟ್ಟು ನಮ್ಮ ಪರಿಸರಕ್ಕೆ ಕೊಡುಗೆ ನೀಡಿದ್ದಾರೆ.
ಸಾಲುಮರದ ತಿಮ್ಮಕ್ಕ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಇದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರ ರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್‌ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.

Salumarada-Timmakka
ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದರು. ತಂದೆ ಚಿಕ್ಕರಂಗಯ್ಯ; ತಾಯಿ ವಿಜಯಮ್ಮ. ಇವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭ್ಯವಾಗದೆ ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು. ಇವರು ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಮದುವೆಯಾಗಿದ್ದು, ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು ಎಂದು ಹೇಳಲಾಗಿದೆ.
ಕುದೂರಿನಿಂದ ಹುಲಿಕಲ್ ತನಕವಿರುವ ರಾಜ್ಯ ಹೆದ್ದಾರಿ ೯೪ರಲ್ಲಿ ತಿಮ್ಮಕ್ಕರವರು ಬೆಳಸಿದ ಆಲದ ಮರಗಳು. ತಿಮ್ಮಕ್ಕ ಅವರ ಹಳ್ಳಿಯ ಬಳಿ ಆಲದ ಮರಗಳು ಹೇರಳವಾಗಿದ್ದವು. ತಿಮ್ಮಕ್ಕ ಮತ್ತು ಅವರ ಪತಿ ಈ ಮರಗಳಿಂದ ಸಸಿಗಳನ್ನು ಕಸಿಮಾಡಲು ಆರಂಭಿಸಿದರು. ಮೊದಲ ವರ್ಷದಲ್ಲಿ ಹತ್ತು ಸಸಿಗಳನ್ನು ನೆರೆಯ ಕುದೂರು ಹಳ್ಳಿಯ ಬಳಿ ೪ ಕಿ.ಮೀ. ಉದ್ದಳತೆಯ ದೂರ ನೆಡಲಾಯಿತು. ಹೀಗೆಯೇ ಎರಡನೇ ವರ್ಷ ಹದಿನೈದು ಮತ್ತು ಮೂರನೇ ವರ್ಷ ೨೦ ಸಸಿಗಳನ್ನು ನೆಡಲಾಯಿತು.
ಇವರು ಈ ಸಸಿಗಳನ್ನು ನೆಡಲು ತಮ್ಮ ಅತ್ಯಲ್ಪ ಆದಾಯವನ್ನೇ ಬಳಸಿದರು. ಈ ಗಂಡ-ಹೆಂಡಿರು ಸಸಿಗಳಿಗೆ ನೀರುಣಿಸಲು ಬಿಂದಿಗೆ ಕೊಳಗಗಳಲ್ಲಿ ನೀರನ್ನು ನಾಲ್ಕು ಕಿ.ಮೀ. ದೂರ ಸಾಗಿಸುತ್ತಿದ್ದರು. ಹಾಗೂ ಸಸಿಗಳನ್ನು ಮೇವಿನ ಜಾನುವಾರುಗಳ ಕಾಟದಿಂದ ತಪ್ಪಿಸಲು ಅವುಗಳ ಸುತ್ತ ಮುಳ್ಳು ಪೊದೆಗಳನ್ನು ಹೊದಿಸಿ ಕಾಪಾಡಿದರು. ಸಸಿಗಳು ಬೆಳೆಯಲು ನೀರಿನ ಅವಶ್ಯಕತೆಯಿರುವುದರಿಂದ, ಅವಗಳನ್ನು ಹೆಚ್ಚಾಗಿ ಮಳೆಯ ಕಾಲದಲ್ಲಿ ನೆಡಲಾಯಿತು.
ಮುಂದಿನ ಮುಂಗಾರಿನಷ್ಟು ಹೊತ್ತಿಗೆ ಈ ಎಲ್ಲ ಸಸಿಗಳು ಚೆನ್ನಾಗಿ ಬೇರು ಬಿಟ್ಟಿದ್ದವು. ಒಟ್ಟಾರೆ ೨೮೪ ಸಸಿಗಳನ್ನು ನೆಡಲಾಗಿ, ಇಂದಿಗೆ ಅವುಗಳ ಮೌಲ್ಯವು ಸುಮಾರು ೧೫ ಲಕ್ಷ ರೊ. ಅಂದಾಜು ಮಾಡಲಾಗಿದೆ. ಈ ಮರಗಳ ನಿರ್ವಹಣೆಯನ್ನು ಈಗ ಕರ್ನಾಟಕ ಸರಕಾರ ವಹಿಸಿಕೊಂಡಿದೆ.
